ಕರ್ನಾಟಕದಲ್ಲಿ ಸುಮಾರು ನಾಲ್ಕು ದಶಕಗಳಿಂದ 2ಬಿ ಕೆಟಗರಿ ಅಡಿಯಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ 2ಬಿ ಮೀಸಲಾತಿ ರದ್ದುಪಡಿಸಿ ಆ 4% ಅನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ. 2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು. ಅದರ ಬದಲು ಮುಸ್ಲಿಮರಿಗೆ ಇಡಬ್ಲೂಎಸ್ ಕೋಟಾದಲ್ಲಿ ಮೀಸಲಾತಿ ನೀಡಲಾಗುವುದು ಎಂದು ತಿಳಿಸಿತ್ತು.
ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.
ಕರ್ನಾಟಕದಲ್ಲಿ ಚುನಾವಣೆಯ ವೇಳೆಯಲ್ಲಿ ಮೀಸಲಾತಿ ಪರಿಷ್ಕರಣೆ ವೇಳೆ ಮುಸ್ಲಿಮರಿಗೆ ರಾಜ್ಯ ಸರ್ಕಾರ ಶೇ. 4ರ ಮೀಸಲಾತಿ ರದ್ದು ಮಾಡಿತ್ತು. ಸರ್ಕಾರದ ಈ ಆದೇಶ ಸಾಮಾಜಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇನ್ನೊಬ್ಬರ ಮೀಸಲಾತಿ ಕಿತ್ತು ನಮಗೆ ಕೊಡುವುದು ಬೇಡ ಎಂದು ಹಲವರು ಪ್ರಜ್ಞಾವಂತರು ವಿರೋಧಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಕೂಡ ಅದೇ ನಿಲುವನ್ನು ವ್ಯಕ್ತಪಡಿಸಿದೆ. ಸದ್ಯಕ್ಕೆ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಮೇ 09ಕ್ಕೆ ಮುಂದೂಡಿದೆ.
ಚುನಾವಣಾ ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರ ಪ್ರಬಲ ಜಾತಿಗಳಾದ ಲಿಂಗಾಯತ ಮತ್ತು ಬಿಜೆಪಿಗೆ ಮೀಸಲಾತಿ ನೀಡುವ ಉದ್ದೇಶದಿಂದ ತರಾತುರಿಯಲ್ಲಿ ಶೇ 4ರಷ್ಟು ಮುಸ್ಲಿಂ ಮೀಸಲಾತಿ ರದ್ದು ಮಾಡಿದೆ. ‘ಈ ತೀರ್ಮಾನವು ಅತಿ ಕಳಪೆ ಮತ್ತು ದೋಷಪೂರಿತ ನಿರ್ಧಾರಕ್ಕೆ ಪ್ರಥಮ ಸಾಕ್ಷಿ’ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಈ ಹಿಂದೆ ಛೀಮಾರಿ ಹಾಕಿತ್ತು.